ಹುಬ್ಬಳ್ಳಿ: ನಗರದಲ್ಲಿ ಚಾಕು, ಮಾರಕಾಸ್ತ್ರಗಳ ಅಕ್ರಮ ಸಾಗಾಟ ಹಾಗೂ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಕಮಿಷನರೇಟ್ನ ಆದೇಶದ ಮೇರೆಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ‘ಆಂಟಿ ಸ್ಟ್ಯಾಬಿಂಗ್ ಸ್ಕ್ವಾಡ್’ಗಳನ್ನು ಕಾರ್ಯಾಚರಣೆಗೆ ಇಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ನಿಗಾ ವಹಿಸುವುದರ ಜೊತೆಗೆ, ಮಾರಕಾಸ್ತ್ರಗಳ ಸಾಗಾಟದ ಕುರಿತು ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಈ ಸ್ಕ್ವಾಡ್ಗಳು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಇತರೆ ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ ನಡೆಸುತ್ತಿದ್ದು, ಸಾರ್ವಜನಿಕರು ಯಾವುದೇ ಮಾರಕಾಸ್ತ್ರಗಳನ್ನು ಹೊಂದಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ.

ತಪಾಸಣೆ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರಗಳು ಪತ್ತೆಯಾದಲ್ಲಿ, ಸಂಬಂಧಪಟ್ಟವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ, ಇಂದು ಇದುವರೆಗೆ 200ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಲಾಗಿದ್ದು, ನಗರದಾದ್ಯಂತ ಪೊಲೀಸ್ ಪಡೆ ತೀವ್ರ ಕಟ್ಟೆಚ್ಚರ ವಹಿಸಿದೆ.
ನಗರದಲ್ಲಿ ಅಪರಾಧ ಕೃತ್ಯಗಳಿಗೆ ಬಳಸಬಹುದಾದ ಮಾರಕಾಸ್ತ್ರಗಳ ಹಾವಳಿಗೆ ಕಡಿವಾಣ ಹಾಕಿ, ಸಾರ್ವಜನಿಕರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ಮುಂದುವರಿಯಲಿದೆ.