ಧಾರವಾಡ: ಕಾಂಗ್ರೆಸ್ ಪಕ್ಷವು ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಂದಗೋಳದ ಚಂದ್ರಶೇಖರ ಜುಟ್ಟಲ್ ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸದಾನಂದ ಡಂಗನವರ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ‘ಸಂಘಟನಾ ಸೃಜನ್ ಅಭಿಯಾನ’ದಡಿ ಬೂತ್ ಮಟ್ಟದ ಕಾರ್ಯಕರ್ತರು, ಮುಖಂಡರು ಹಾಗೂ ವಿವಿಧ ಹಂತದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಈ ನೇಮಕಾತಿ ಮಾಡಲಾಗಿದೆ.

ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ಚರ್ಚೆಯಲ್ಲಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಚಂದ್ರಶೇಖರ ಜುಟ್ಟಲ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು ಎನ್ನಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿನೋದ ಅಸೂಟಿ ಅವರ ಹೆಸರೂ ಪ್ರಮುಖವಾಗಿ ಕೇಳಿಬಂದಿತ್ತು.
ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸ್ಥಾನಕ್ಕೆ 20ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದರು ಎನ್ನಲಾಗಿದ್ದು, ಅಂತಿಮವಾಗಿ ಡಂಗನವರ ಅವರ ಆಯ್ಕೆಯಾಗಿದೆ.
ನೂತನ ಅಧ್ಯಕ್ಷರ ನೇಮಕದಿಂದ ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ದೊರೆಯುವ ನಿರೀಕ್ಷೆ ಪಕ್ಷದ ವಲಯದಲ್ಲಿ ವ್ಯಕ್ತವಾಗಿದೆ. ಮುಂಬರುವ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಮತ್ತು ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು ನೂತನ ಅಧ್ಯಕ್ಷರ ಮುಂದಿರುವ ಪ್ರಮುಖ ಜವಾಬ್ದಾರಿಯಾಗಿದೆ.