ಹುಬ್ಬಳ್ಳಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಬಂದೋಬಸ್ತ್ ಸಿದ್ಧತೆಗಳನ್ನು ಕರ್ನಾಟಕ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರು ಗುರುವಾರ ಪರಿಶೀಲಿಸಿದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ ಅವರು, ಗಣೇಶೋತ್ಸವದ ಬಂದೋಬಸ್ತ್ ವ್ಯವಸ್ಥೆ, ಪೊಲೀಸ್ ಸಿಬ್ಬಂದಿ ನಿಯೋಜನೆ, ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳು ಸೇರಿದಂತೆ ಭದ್ರತಾ ಸಿದ್ಧತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅದಕ್ಕಿಂತ ಮೇಲಿನ ಹುದ್ದೆಯ ಅಧಿಕಾರಿಗಳ ಸಭೆ ನಡೆಸಿದ ಎಡಿಜಿಪಿ ಹಿತೇಂದ್ರ, ಗಣೇಶೋತ್ಸವವನ್ನು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೆರವಣಿಗೆಗಳು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಣಾಮಕಾರಿ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಹಾಗೂ ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ನಿರ್ದೇಶನ ನೀಡಿದರು.
ಬಳಿಕ ಎಡಿಜಿಪಿ ಹಿತೇಂದ್ರ ಅವರು ಹುಬ್ಬಳ್ಳಿ ಟೌನ್ ಹಾಗೂ ಹುಬ್ಬಳ್ಳಿ ಸಬ್ಅರ್ಬನ್ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಗಣೇಶೋತ್ಸವದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆ, ಸ್ಥಳೀಯ ಪರಿಸ್ಥಿತಿ ಹಾಗೂ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಗಣೇಶೋತ್ಸವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.