ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಮೋಹನ್ ಕಲಾಲ್ (40) ಹಾಗೂ ಪ್ರವೀಣ್ ಕಲಾಲ್ (46) ಎಂದು ಗುರುತಿಸಲಾಗಿದೆ. ಪ್ರವೀಣ್ ಕಲಾಲ್ ಅವರು ಬೆಂಕಿ ಅವಘಡದಲ್ಲಿ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಸುಮನ್ ಕಲಾಲ್ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಮೃತ ಪ್ರವೀಣ್ ಕಲಾಲ್ ಕೆ.ಇ.ಬಿ.ಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಿನ್ನೆ ತಡರಾತ್ರಿ ಸಂಭವಿಸಿದ ಈ ದುರ್ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ಅವಘಡ ಹೇಗೆ ಸಂಭವಿಸಿತು ಎಂಬ ಕುರಿತು ಹಳೇ ಹುಬ್ಬಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಘಟನೆಯ ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ.