ಧಾರವಾಡ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯ ಪಂಚರ್ ಆದ ಟೈರ್ ದುರಸ್ತಿ ಮಾಡುತ್ತಿದ್ದವರ ಮೇಲೆ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಬಳಿ ನಡೆದಿದೆ.
ಸೌದತ್ತಿಯ ಸಕ್ಕರೆ ಕಾರ್ಖಾನೆಯಿಂದ ಮೊಲಾಸಿಸ್ (ಕಾಕಂಬಿ) ತುಂಬಿಕೊಂಡು ಬರುತ್ತಿದ್ದ ಲಾರಿಯ ಟೈರ್ ಅಮ್ಮಿನಭಾವಿ ಬಳಿ ಪಂಚರ್ ಆಗಿದೆ ಎನ್ನಲಾಗಿದೆ. ಹೀಗಾಗಿ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಚಾಲಕ ಹಾಗೂ ಆತನೊಂದಿಗೆ ಇದ್ದ ಇಬ್ಬರು ಸೇರಿ ಒಟ್ಟು ಮೂವರು ಪಂಚರ್ ಆದ ಟೈರ್ ದುರಸ್ತಿ ಮಾಡುವ ಕೆಲಸದಲ್ಲಿ ತೊಡಗಿದ್ದರು.
ಇದೇ ವೇಳೆ ಸೌದತ್ತಿ ಕಡೆಯಿಂದ ಉಳ್ಳಾಗಡ್ಡಿ ತುಂಬಿಕೊಂಡು ಬರುತ್ತಿದ್ದ ಬೊಲೆರೋ ಪಿಕಪ್ ವಾಹನ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಟೈರ್ ದುರಸ್ತಿ ಮಾಡುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದ ಭೀಕರ ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರಲ್ಲಿ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಇನ್ನೊಬ್ಬ ಗಾಯಾಳುವಿನ ಸ್ಥಿತಿಯೂ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅಪಘಾತ ಪಡಿಸಿದ ಬೊಲೆರೋ ವಾಹನ ವಶಕ್ಕೆ ಪಡೆಯಲಾಗಿದೆ, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.
ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.