ಧಾರವಾಡ: ನಗರದ ಬಸಪ್ಪ ಚೌಕ್ ಸಮೀಪದ ಕುರುಬರ ಓಣಿ ಬಳಿ ಮನೆಯೊಂದಕ್ಕೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಮನೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹೊತ್ತಿ ಉರಿದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಹರ ಪೊಲೀಸ್ ಠಾಣೆಯ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹಚ್ಚಿದ ಎನ್ನಲಾದ ವ್ಯಕ್ತಿ ಶಹರ ಪೊಲೀಸ್ ಠಾಣೆಯಲ್ಲಿ MOB ಆಗಿರುವ ಜಾವೇದ್ ದಲಾಯತ ಎಂದು ತಿಳಿದುಬಂದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಗೆ ನಿಖರ ಕಾರಣ ಹಾಗೂ ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.