ಹುಬ್ಬಳ್ಳಿ: ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಮಾಡಿದ್ದ ಕಾಮೆಂಟ್ವೊಂದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ, ಕಾರಿನಲ್ಲಿ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ರಸ್ತೆ ಬದಿ ಎಸೆದು ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಸಾದಿಕ್ ಬಾರ್ವಾಚಿ 21 ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಸುಮಾರು 15ರಿಂದ 20 ಮಂದಿ ಗುಂಪು ಸಾದಿಕ್ನನ್ನು ಇಂಡಿಪಂಪ್ ನಿಂದ ಕಾರಿನಲ್ಲಿ ಹಾಕಿಕೊಂಡು ಕುಸುಗಲ್ ಬಳಿ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಗುಬ್ಬೂರ್ ಸಮೀಪ ರಸ್ತೆ ಬದಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿಗಳು ರಾಡ್ ಹಾಗೂ ಪಂಚ್ಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಸಾದಿಕ್ಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಮಾಡಿದ್ದ ಕಾಮೆಂಟ್ಗೆ ಕೋಪಗೊಂಡು ಈ ದಾಳಿ ನಡೆದಿದೆ ಎನ್ನಲಾಗಿದೆ. ಹಲ್ಲೆ ನಡೆಸಿದವರು ಚೋಟಾ ಮಂಟೂರ ರಸ್ತೆ ನಿವಾಸಿಗಳು ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ವಿಷಯ ತಿಳಿದು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಯ ಹಿನ್ನೆಲೆ, ದಾಳಿಕೋರರ ಸಂಖ್ಯೆ, ಬಳಸಿದ ವಾಹನ ಹಾಗೂ ಹಲ್ಲೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ಸಾಮಾಜಿಕ ಜಾಲತಾಣದ ಒಂದು ಕಾಮೆಂಟ್ ವಿವಾದಕ್ಕೆ ಕಾರಣವಾಗಿ, ಯುವಕನನ್ನು ಅಪಹರಿಸಿ ಹಲ್ಲೆ ನಡೆಸುವ ಮಟ್ಟಕ್ಕೆ ಪ್ರಕರಣ ತಲುಪಿರುವುದು ಹುಬ್ಬಳ್ಳಿಯಲ್ಲಿ ಆತಂಕ ಮೂಡಿಸಿದೆ. ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.